ಬರಪರಿಹಾರ ನೀಡಲು ಬದ್ದ : ಸಚಿವ ಕೆ.ಜೆ. ಜಾರ್ಜ್

ಸುದ್ದಿ ಕಡೂರು : ಬರಗಾಲದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಕಡೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ ಕೊರತೆಯಿಂದ ಬೆಳೆ ಹಾನಿಯಾದ  ಜಮೀನುಗಳಿಗೆ ಬುಧವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ  ಮಾತನಾಡಿದರು.
ರಾಜ್ಯ ಸರ್ಕಾರ ರೈತರಿಗೆ ಸಾಧ್ಯವಾದ ಎಲ್ಲ ರೀತಿಯ ನೆರವು ನೀಡಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಬರದಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಬರದ ವಾಸ್ತವ ಚಿತ್ರಣ ಅರಿಯಲು ರೈತರ ಜಮೀನುಗಳಿಗೆ ಭೇಟಿ ನೀಡಲಾಗುತ್ತಿದೆ ಎಂದರು.
ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ವಾಸ್ತವ ಮಾಹಿತಿಯನ್ನು ಸರ್ಕಾರಕ್ಕೆ ನೀಡಬೇಕು. ರೈತರು ಸಹ ಬೆಳೆ ನಷ್ಟದ ಮಾಹಿತಿಯನ್ನು ತಾವೇ ಆನ್‌ಲೈನ್ ಮೂಲಕ ಚಿತ್ರ ಸಹಿತ ಕೃಷಿ ಇಲಾಖೆಗೆ ಸಲ್ಲಿಸಬಹುದು. ಸರಿಯಾದ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಉಳಿದ ಕೆಲ ಹೋಬಳಿಯನ್ನು ಪಟ್ಟಿಗೆ ಸೇರಿಸಲಾಗುವುದು ಎಂದು ತಿಳಿಸಿದರು.
ಕೇಂದ್ರಕ್ಕೆ ರಾಜ್ಯ ಸರ್ಕಾರ ಪಾವತಿಸಿರುವ 4.5 ಲಕ್ಷ ಕೋಟಿ ರೂ. ಎನ್‌ಡಿಆರ್‌ಎಫ್ ನಿಧಿಯಲ್ಲಿ ಕೇವಲ 35=40 ಸಾವಿರ ಕೋಟಿ ರೂ. ಮಾತ್ರ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್ ನಿಧಿಗೆ ಪಾವತಿಸಿರುವ ಮೊತ್ತದಲ್ಲಿ ಹೆಚ್ಚು ಅನುದಾನ ಕೇಂದ್ರ ಸರ್ಕಾರ ನೀಡಬೇಕು. ಆಗ ರೈತರಿಗೆ ಮತ್ತಷ್ಟು ನೆರವು ನೀಡಲು ಸಾಧ್ಯವಾಗುತ್ತದೆ ಎಂದರು.
ಬರ ವೀಕ್ಷಣೆಯ ನಂತರ ಕಡೂರು ಕಾರ್ಯ ನಿರ್ವಾಹಕಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಹಾಗೂ ದನಕರುಗಳಿಗೆ ಮೇವಿಗೆ ಕೊರತೆಯಾಗದಂತೆ ಕ್ರಮವಹಿಸಬೇಕು. ಕುಡಿಯುವ ನೀರಿಗೆ ಸಮಸ್ಯೆ ಕಂಡು ಬರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಬೇಕು. ಅಮೃತ್ ಮಹಲ್ ಕಾವಲಿನಲ್ಲಿ ಮೇವು ಬೆಳೆಯಲು ಕ್ರಮವಹಿಸಬೇಕು ಎಂದ ಸಚಿವರು ಇದಕ್ಕೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ, ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ತರೀಕೆರೆ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ತರೀಕೆರೆ ಉಪ ವಿಭಾಗದ ಉಪ ವಿಭಾಗಾಧಿಕಾರಿ ಕಾಂತರಾಜ್ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!